ಶೀಘ್ರದಲ್ಲಿಯೇ ಪೊಲೀಸರಿಗೆ ೬ನೇ ವೇತನ ಆಯೋಗ ಜಾರಿ
ತುಮಕೂರು: ರಾಜ್ಯ ಪೊಲೀಸರ ವೇತನ ಹೆಚ್ಚಳ ಸಂಬಂಧ ಈಗಾಗಲೇ ೬ನೇ ವೇತನ ಆಯೋಗಕ್ಕೆ ಶಿಫಾರಸ್ಸು ಮಾಡಲಾಗಿದೆ ಎಂದು ಗೃಹ ಸಚಿವ ಹಾಗೂ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.ನಗರದ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕವಾಯತು ಮೈದಾನದಲ್ಲಿ ಪೊಲೀಸ್ ತರಬೇತಿ ಶಾಲೆ ವತಿಯಿಂದ ಏರ್ಪಡಿಸಿದ್ದ ೯ನೇ ತಂಡದ ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್‌ಗಳ ನಿರ್ಗಮನ ಪಥ ಸಂಚಲನ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿಯ ವೇತನವನ್ನು ಇತರೆ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ವೇತನದಂತೆ ಹೆಚ್ಚಳ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದರು.
೬ನೇ ವೇತನ ಆಯೋಗ ತಾವು ಮಾಡಿರುವ ಶಿಫಾರಸ್ಸು ಪರಿಶೀಲಿಸಿ ಜಾರಿಗೊಳಿಸಿದರೆ ರಾಜ್ಯ ಸರಕಾರದ ಇತರೆ ಇಲಾಖೆಗಳಂತೆ ಪೊಲೀಸ್ ಇಲಾಖೆಯ ನೌಕರರಿಗೆ ವೇತನ ಹೆಚ್ಚಳವಾಗಲಿದೆ. ಈ ಕಾರ್ಯ ಆದಷ್ಟು ಶೀಘ್ರವಾಗಿ ಆಗಲಿದೆ.
ರಾಜ್ಯ ಪೊಲೀಸ್ ಇಲಾಖೆಯಲ್ಲಿ ನೇಮಕಾತಿ ನಿರಂತರವಾಗಿ ನಡೆಯುತ್ತಿದ್ದು, ಇಲಾಖೆಯಲ್ಲಿ ಸಿಬ್ಬಂದಿಗಳ ಕೊರತೆ ಇಲ್ಲ. ಈಗಾಗಲೇ ೨೪ ಸಾವಿರ ಪೊಲೀಸರನ್ನು ನೇಮಕ ಮಾಡಲಾಗಿದೆ.ಪೊಲೀಸರಿಗೆ ಬಡ್ತಿ, ಆರೋಗ್ಯ, ವಸತಿ ಗೃಹ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ.ಔರಾದ್‌ಕರ್ ವರದಿಯಲ್ಲಿನ ಎಲ್ಲ ಅಂಶಗಳನ್ನು ಪರಿಶೀಲಿಸಿ ಹಂತ ಹಂತವಾಗಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದರು.
ರಾಜ್ಯದಲ್ಲಿ ಅಪಘಾತ ಸಂಭವಿಸುವ ಜಾಗಗಳನ್ನು ಗುರುತಿಸಿದ್ದು,ಅಂತಹ ಕಡೆ ಪ್ರತಿ ೩೫ ಕಿ.ಮೀ. ಒಂದರಂತೆ ಹೈವೇ ಪೆಟ್ರೋಲಿಂಗ್ ವಾಹನಗಳನ್ನು ವ್ಯವಸ್ಥೆ ಮಾಡಲಾಗಿದೆ.ಈ ವಾಹನಗಳಿಗೆ ಅತ್ಯಾಧುನಿಕ ಸೌಲಭ್ಯಗಳನ್ನು ಅಳವಡಿಸಲಾಗಿದೆ.
ಮುಂದಿನ ದಿನಗಳಲ್ಲಿ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಹೈವೇ ಪೆಟ್ರೋಲಿಂಗ್ ವಾಹನಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವಂತೆ ಈಗಾಗಲೇ ಸೂಚನೆ ನೀಡಿರುವುದಾಗಿ ಅವರು ಹೇಳಿದರು.
No comments:
Post a Comment